ಅಕ್ಕಮಹಾದೇವಿ ವಿವಿ ಮುಚ್ಚಲಿದೆಯಾ? ಉನ್ನತ ಶಿಕ್ಷಣ ಸಚಿವ ಅಶ್ವತ್ಥನಾರಾಯಣ ಹೇಳಿದ್ದೇನು? ಇಲ್ಲಿದೆ ನೋಡಿ
ವಿಜಯಪುರ: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿವಿಯನ್ನು ಮುಚ್ಚಲಾಗುತ್ತಿದೆ ಎಂಬ ಸುದ್ದಿ ರಾಜ್ಯಾದ್ಯಂತ ಸದ್ದು ಮಾಡುತ್ತಿದೆ. ಈ ಬಗ್ಗೆ ಉನ್ನತ ಶಿಕ್ಷಣ ಸಚಿವ ಅಶ್ವತ್ಥನಾರಾಯಣ ಸ್ಪಷ್ಟನೆ ನೀಡಿದ್ದು, ಸದ್ಯಕ್ಕೆ ಆ ಬಗ್ಗೆ ಯಾವುದೇ ಚರ್ಚೆ ಇಲ್ಲ ಎಂದಿದ್ದಾರೆ.
ವಿಧಾನ ಪರಿಷತ್ ಚುನಾವಣೆ ಹಿನ್ನೆಲೆ ಶುಕ್ರವಾರ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಅರುಣ ಶಹಾಪುರ ಹಾಗೂ ಪದವಿಧರ ಕ್ಷೇತ್ರದ ಅಭ್ಯರ್ಥಿ ಹಣಮಂತ ನಿರಾಣಿ ಪರ ಮತಯಾಚನೆ ಬಳಿಕ ಸುದ್ದಿಗೋಷ್ಠಿಯಲ್ಲಿ ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದ ಅವರು, ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿವಿಯನ್ನು ಬದಲಿಸುವ ವಿಷಯಕ್ಕೆ ಸಂಬಂಧಿಸಿದಂತೆ ಈ ಭಾಗದ ಅಭಿಪ್ರಾಯಕ್ಕೆ ಅನುಗುಣವಾಗಿಯೇ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದರು.
ಯಾವುದೇ ಕಾರಣಕ್ಕೂ ಅಭಿಪ್ರಾಯಕ್ಕೆ ವಿರೋಧವಾಗಿ ತೆಗೆದುಕೊಳ್ಳುವುದಿಲ್ಲ. ಯಾವುದೇ ನಿರ್ಧಾರ ತೆಗೆದುಕೊಂಡರೂ ಅಭಿಪ್ರಾಯ ಆಧರಿಸಿಯೇ ತೆಗೆದುಕೊಳ್ಳಲಾಗುವುದು ಎಂದರು.
ಜಿಲ್ಲೆಗೊಂದು ನೂತನ ವಿಶ್ವ ವಿದ್ಯಾಲಯ ಸ್ಥಾಪನೆಗೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ಈಗಾಗಲೇ ಆರು ವಿವಿ ಸ್ಥಾಪಿಸಲಾಗಿದೆ. ಏಳು ವಿವಿ ಸ್ಥಾಪಿಸಬೇಕೆಂಬ ಚರ್ಚೆಯೂ ಇದೆ. ಶಿಕ್ಷಣದಲ್ಲಿ ಗುಣಮಟ್ಟ ಇರಬೇಕು. ಆ ನಿಟ್ಟಿನಲ್ಲಿ ಹೆಜ್ಜೆಯನ್ನಿರಿಸಲಾಗುವುದು ಎಂದರಲ್ಲದೇ ಈ ಭಾಗದ ಶೈಕ್ಷಣಿಕ ಪ್ರಗತಿಗೆ ಸರ್ಕಾರ ಶ್ರಮಿಸಲಿದೆ ಎಂದರು.
ಪಿಎಸ್‌ಐ ಅಕ್ರಮ ನೇಮಕ ವಿಚಾರ:
ಪಿಎಸ್‌ಐ ನೇಮಕ ಅಕ್ರಮ ಪ್ರಕರಣದಲ್ಲಿ ಖುದ್ದು ತಮ್ಮ ಸಹೋದರನ ಹೆಸರು ಕೇಳಿ ಬಂದಿದ್ದು ಪ್ರಕರಣದ ದಿಕ್ಕು ತಪ್ಪಿಸುವ ಪ್ರಯತ್ನ ನಡೆಯುತ್ತಿದೆ ಎಂಬ ಆರೋಪ ಇದೆಯಲ್ಲ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಕಾಂಗ್ರೆಸ್ ಅಧಿಕಾರದಲ್ಲಿದ್ದರೆ ಪ್ರಕರಣದ ದಿಕ್ಕು ತಪ್ಪುತ್ತಿತ್ತು. ಆದರೆ, ಬಿಜೆಪಿಯಲ್ಲಿ ಅದಕ್ಕೆ ಅವಕಾಶ ಇಲ್ಲ ಎಂದರು.
ಶಾಸಕ ಸೋಮನಗೌಡ ಪಾಟೀಲ ಸಾಸನೂರ, ರಾಜ್ಯ ಬೀಜ ಮತ್ತು ಸಾವಯವ ಪ್ರಮಾಣನ ಸಂಸ್ಥೆ ಅಧ್ಯಕ್ಷ ವಿಜುಗೌಡ ಪಾಟೀಲ, ಮಾಜಿ ಸಚಿವ ಅಪ್ಪಾಸಾಹೇಬ ಪಟ್ಟಣಶೆಟ್ಟಿ, ಬಿಜೆಪಿ ಹಿಂದುಳಿದ ವರ್ಗ ಮೋರ್ಚಾ ಅಧ್ಯಕ್ಷ ವಿವೇಕಾನಂದ ಡಬ್ಬಿ, ಶಿವರುದ್ರ ಬಾಗಲಕೋಟ, ಮಲ್ಲಿಕಾರ್ಜುನ ಜೋಗೂರ, ಬಸವರಾಜ ಬಿರಾದಾರ ಮತ್ತಿತರರು ಇದ್ದರು.