ಬಿಎಸ್‌ವೈ ಸೈಡ್‌ಲೈನ್ ಆಗುತ್ತಿದ್ದಾರಾ? ವಿಜಯಪುರದಲ್ಲಿ ಸಚಿವ ಭೈರತಿ ಹೇಳಿದ್ದೇನು?
ಸರಕಾರ್ ನ್ಯೂಸ್ ವಿಜಯಪುರ
ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರನ್ನು ಸೈಡ್‌ಲೈನ್ ಮಾಡಲಾಗುತ್ತಿದೆಯಾ? ಪಕ್ಷದಿಂದ ಕಡೆಗಣಿಸಲಾಗುತ್ತಿದೆಯಾ? ಬಿಜೆಪಿಯಲ್ಲಿ ಏನೆಲ್ಲಾ ಬೆಳವಣಿಗೆಗಳಾಗುತ್ತಿವೆ? ಕಾಂಗ್ರೆಸ್‌ನಿಂದ ಬಿಜೆಪಿಗೆ ವಲಸೆ ಬಂದ ಶಾಸಕರು ವಾಪಸ್ ಹೋಗುತ್ತಾರಾ? ಹೀಗೆ ಸಾಲು ಸಾಲು ಪ್ರಶ್ನೆಗಳಿಗೆ ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ್ ನೀಡಿದ ಪ್ರತಿಕ್ರಿಯೆ ಇಲ್ಲಿದೆ ನೋಡಿ…..
ಗುರುವಾರ ವಿಜಯಪುರದ ನೂತನ ಬಿಜೆಪಿ ಕಾರ್ಯಾಲಯದ ಉದ್ಘಾಟನೆಗೆ ಆಗಮಿಸಿದ್ದ ಸಚಿವ ಭೈರತಿ ಬಸವರಾಜ ಉದ್ಘಾಟನೆಗೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡುತ್ತಾ, ಬಿಜೆಪಿಯಲ್ಲಿ ಯಾವುದೇ ಅಸಮಾಧಾನಗಳಿಲ್ಲ, ಎಲ್ಲರೂ ಒಟ್ಟಾಗಿದ್ದೇವೆ, ಸಿಎಂ ಬಸವರಾಜ ಬೊಮ್ಮಾಯಿ ಹಾಗೂ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಸೇರಿದಂತೆ ಹಿರಿಯ ನಾಯಕರ ಸಮ್ಮುಖದಲ್ಲಿ ವಿಧಾನ ಸಭೆ ಚುನಾವಣೆ ಎದುರಿಸಲಾಗುತ್ತಿದ್ದು, ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದರು.
ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರನ್ನು ಸೈಡ್‌ಲೈನ್ ಮಾಡುವ ಪ್ರಶ್ನೆಯೇ ಇಲ್ಲ. ಅವರೊಬ್ಬ ಪ್ರಶ್ನಾತೀತ ನಾಯಕ. ಅವರಿಗೆ ಪಕ್ಷದ ಉನ್ನತ ಸ್ಥಾನ ಮಾನ ನೀಡಲಾಗಿದೆ. ಹೀಗಾಗಿ ನಾವೆಲ್ಲರೂ ಒಟ್ಟಾಗಿದ್ದೇವೆ. ಯಾವುದೇ ಅಸಮಾಧಾನಗಳಿಲ್ಲಎಂದು ಪ್ರತಿಕ್ರಿಯಿಸಿದರು.
ಕಾಂಗ್ರೆಸ್‌ಗೆ ಭಯದ ವಾತಾವರಣ ಕಾಡುತ್ತಿದೆ. ಹೀಗಾಗಿ ಇಲ್ಲ ಸಲ್ಲದ ಆರೋಪ ಮಾಡುತ್ತಿದೆ. ಆದರೆ, ನಮ್ಮ ನಾಯಕರು ಮತ್ತುಕಾರ್ಯಕರ್ತರು ಅತ್ಯಂತ ಉತ್ಸಾಹದಲ್ಲಿದ್ದಾರೆ. ರಾಜ್ಯದಲ್ಲಿ ಮತ್ತೆ ಅಧಿಕಾರಕ್ಕೆ ಬರುತ್ತೇವೆ. ಇದು ಕಾಂಗ್ರೆಸ್‌ಗೆ ಭಯ ಉಂಟು ಮಾಡಿದೆ. ಕಾಂಗ್ರೆಸ್ ಅಸ್ತಿತ್ವ ಕಳೆದುಕೊಳ್ಳುತ್ತಿದೆ. ಹೀಗಾಗಿ ಇಲ್ಲ ಸಲ್ಲದ ಹೇಳಿಕೆ ನೀಡುತ್ತಿದೆ. ಇನ್ನು ಸೋಲಿನ ಭಯದಲ್ಲಿ ಎಲ್ಲರಿಗೂ ಪಕ್ಷಕ್ಕೆ ಆಹ್ವಾನ ಮಾಡುತ್ತಿದೆ. ಆದರೆ, ಯಾರೂ ಹೋಗುತ್ತಿಲ್ಲಎಂದರು.
ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಬಿ.ವೈ. ವಿಜಯೇಂದ್ರ ಸ್ಪರ್ಧಿಸುತ್ತಾರೆಂಬ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಭೈರತಿ, ಯಾರು ಎಲ್ಲಿ ನಿಲ್ಲಬೇಕು ಎನ್ನುವುದು ಪಕ್ಷಕ್ಕೆ ಬಿಟ್ಟಿರುವ ವಿಚಾರ. ಅದನ್ನು ಹೈ ಕಮಾಂಡ ಹಾಗೂ ಪಕ್ಷ ತೀರ್ಮಾನ ಮಾಡುತ್ತದೆ ಎಂದರು.
ವಿಜಯಪುರ ಮಹಾನಗರ ಪಾಲಿಕೆ ಚುನಾವಣೆ ಮುಗಿದು ತಿಂಗಳು ತಗಿಸಿದರೂ ಮೇಯರ್ ಉಪಮೇಯರ್ ಚುನಾವಣೆಗೆ ದಿನಾಂಕ ನಿಗದಿಗೊಳಿಸದೇ ಇರುವ ಬಗ್ಗೆ ಮಾತನಾಡಿದ ಸಚಿವರು, ಆದಷ್ಟು ಬೇಗ ಮುಹೂರ್ತ ನಿಗದಿಗೊಳಿಸಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.
ಬಿಜೆಪಿ ಜಿಲ್ಲಾಧ್ಯಕ್ಷ ಆರ್.ಎಸ್. ಪಾಟೀಲ ಕೂಚಬಾಳ, ಮಾಜಿ ಸಚಿವ ಅಪ್ಪಾಸಾಹೇಬ ಪಟ್ಟಣಶೆಟ್ಟಿ, ಮುಖಂಡರಾದ ಉಮೇಶ ಕೋಳಕೂರ, ವಿವೇಕಾನಂದ ಡಬ್ಬಿ, ಚಂದ್ರಶೇಖರ ಕವಟಗಿ ಮತ್ತಿತರರಿದ್ದರು.
(ಕ್ಷಣ ಕ್ಷಣದ ಸುದ್ದಿಗಾಗಿ ಸರಕಾರ್ ನ್ಯೂಸ್ ಸಬ್‌ಸ್ಕ್ರೈಬ್ ಆಗಿ. ಪಕ್ಕದಲ್ಲಿರುವ ಬೆಲ್ ಬಟನ್ ಪ್ರೆಸ್ ಮಾಡಿ)