ಮತ್ತೆ ಕರೊನಾ ಹಾವಳಿ, ಲಸಿಕೆ ಹಾಕಿಸಿಕೊಳ್ಳಿ-ಮಾಸ್ಕ್ ಧರಿಸಿ, ಡಿಸಿ ದಾನಮ್ಮನವರ ನೀಡಿದ ಸಲಹೆ-ಸೂಚನೆ ಏನು ಗೊತ್ತಾ?
ಸರಕಾರ್ ನ್ಯೂಸ್ ವಿಜಯಪುರ
ಬೇರೆ ದೇಶಗಳಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಳ ಹಾಗೂ ಹೊಸ ರೂಪಾಂತರಿ ವೈರಾಣು ಪತ್ತೆಯಾದ ಹಿನ್ನೆಲೆಯಲ್ಲಿ ಜ್ವರ, ಕೆಮ್ಮು, ಶೀತ ಉಸಿರಾಟ ತೊಂದರೆ ಇತ್ಯಾದಿ ಲಕ್ಷಣ(ಐಎಲ್‍ಐ ಮತ್ತು ಸಾರಿ ಸಮಸ್ಯೆ) ಇರುವವರಿಗೆ ಕಡ್ಡಾಯವಾಗಿ ಕೋವಿಡ್ ತಪಾಸಣೆ ನಡೆಸಲು ಜಿಲ್ಲೆಯಲ್ಲಿ ತೀರ್ಮಾನಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ ಅವರು ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಕೋವಿಡ್ 19 ಪರಿಸ್ಥಿತಿ ನಿಯಂತ್ರಣದಲ್ಲಿದೆ. ಅದ್ಯಾಗ್ಯೂ ಪ್ರಪಂಚದ ಕೆಲವು ದೇಶಗಳಲ್ಲಿ ಕೋವಿಡ್-19 ಪ್ರಕರಣಗಳಲ್ಲಿ ಏರಿಕೆಯಾಗಿರುವುದರಿಂದ ಪೂರ್ವಭಾವಿಯಾಗಿ ಕ್ರಮಗಳನ್ನು ಪಾಲಿಸುವುದು ಅವಶ್ಯಕವಾಗಿರುವ ಕುರಿತು ರಾಜ್ಯ ಸರ್ಕಾರ ಮಾರ್ಗಸೂಚಿಗಳನ್ನು ಪ್ರಕಟಿಸಿದ್ದು, ಈ ಹಿನ್ನಲೆಯಲ್ಲಿ ಜಿಲ್ಲೆಯ ಪ್ರತಿಯೊಬ್ಬರು ಕೋವಿಡ್ ಲಸಿಕೆ ಹಾಕಿಸಿಕೊಳ್ಳಬೇಕು. ಮಾಸ್ಕ್ ಧರಿಸಿ, ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳಬೇಕು.ಜ್ವರ ಕೆಮ್ಮು ಶೀತ ಇದ್ದವರು ಕೋವಿಡ್ ಪರೀಕ್ಷೆಯನ್ನು ಕಡ್ಡಾಯವಾಗಿ ಮಾಡಿಸಿಕೊಳ್ಳಬೇಕು ಎಂದು ಅವರು ತಿಳಿಸಿದ್ದಾರೆ.
ಕೇಂದ್ರ ಮತ್ತು ರಾಜ್ಯ ಸರಕಾರದ ಮಾರ್ಗಸೂಚಿಯಂತೆ ಕೋವಿಡ್ ತಪಾಸಣೆ ಪ್ರಮಾಣ ಹೆಚ್ಚಿಸಲು ಮತ್ತು ಒಳಾಂಗಣದಲ್ಲಿ ನಡೆಯುವ ಕಾರ್ಯಕ್ರಮಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಂಡು ಮಾಸ್ಕ ಧರಿಸುವಂತೆ ಜನರಲ್ಲಿ ಸಲಹೆ ಹಾಗೂ ಅರಿವು ಮೂಡಿಸಬೇಕು. ಕೋವಿಡ್-19 ಪ್ರಕರಣಗಳ ನಿರ್ವಹಣೆಗಾಗಿ ಪ್ರತ್ಯೇಕವಾಗಿ ಜಿಲ್ಲಾ ಆಸ್ಪತ್ರೆ, ತಾಲೂಕಾ ಆಸ್ಪತ್ರೆಗಳಲ್ಲಿ ಬೆಡ್‍ಗಳನ್ನು ಕಾಯ್ದಿರಿಸಲಾಗಿದೆ. ಕೋವಿಡ್ ಪ್ರಕರಣಗಳು ಕಂಡು ಬಂದ ಸಂದರ್ಭದಲ್ಲಿ ಎಲ್ಲಾ ಸರಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆಯ ವ್ಯವಸ್ಥೆ ಮಾಡಲಾಗಿದೆ. ಜಿಲ್ಲಾ ಮತ್ತು ತಾಲೂಕಾ ಆಸ್ಪತ್ರೆಗಳಲ್ಲಿ ಆಕ್ಸಿಜನ್ ಪೂರೈಕೆ, ಔಷಧಿ ಹಾಗೂ ಬೇಡ್ ಇತ್ಯಾದಿಗಳ ವ್ಯವಸ್ಥೆ ಇರುತ್ತದೆ. ಆರೋಗ್ಯ ಸಂಸ್ಥೆಗಳ ಎಲ್ಲ ವೈದ್ಯರು ಹಾಗೂ ಸಿಬ್ಬಂದಿಗಳು ಆಸ್ಪತ್ರೆಗೆ ಭೇಟಿ ನೀಡುವ ರೋಗಿಗಳು, ಆರೈಕೆ ಮಾಡುವರು ಮತ್ತು ಸಂದರ್ಶಕರು ಮಾಸ್ಕ್ ಧರಿಸುವದು ಕಡ್ಡಾಯವಾಗಿರುತ್ತದೆ. ಕೋವಿಡ್-19 ಮುನ್ನಚ್ಚರಿಕೆ ಹಾಗೂ ನಿಯಂತ್ರಣದಲ್ಲಿ ಕೇಂದ್ರ ಹಾಗೂ ರಾಜ್ಯ ಸರಕಾರಗಳ ಮಾರ್ಗಸೂಚಿಯನ್ನು ಕಡ್ಡಾಯವಾಗಿ ಪಾಲಿಸುವಂತೆ ಅವರು ಸೂಚಿಸಿದ್ದರೆ.
ಪ್ರಥಮ ಹಾಗೂ 2ನೇ ಡೋಸ್ ಪಡೆದವರು ಕಡ್ಡಾಯವಾಗಿ ಬೂಸ್ಟರ್ ಡೋಸ್ ಹಾಕಿಸಿಕೊಳ್ಳಬೇಕು. ನಗರ ಮತ್ತು ಗ್ರಾಮೀಣ ಪ್ರದೇಶದಲ್ಲಿ ಬೂಸ್ಟರ್ ಡೋಸ್ ಹಾಕಿಸಿಕೊಳ್ಳಲು ವಿಶೇಷ ಕ್ಯಾಂಪ್‍ಗಳನ್ನು ಮಾಡಲಾಗಿದೆ. ಜಿಲ್ಲಾ ಆಸ್ಪತ್ರೆ, ತಾಲೂಕಾ ಆಸ್ಪತ್ರೆ, ಪಾಥಮಿಕ ಆರೋಗ್ಯ ಕೇಂದ್ರ ಹಾಗೂ ಉಪ ಕೇಂದ್ರ ಮಟ್ಟದಲ್ಲಿ ಲಸಿಕಾಕರಣ ಕ್ಯಾಂಪ್‍ಗಳನ್ನು ಆಯೋಜಿಸಲಾಗಿದ್ದು, ಜಿಲ್ಲೆಯಲ್ಲಿ ಕೋವಿಡ್ ನಿಯಂತ್ರಣಕ್ಕಾಗಿ ಬೂಸ್ಟರ್ ಡೋಸ್ ಪಡೆದು, ಮಾಸ್ಕ್ ಧರಿಸಿ-ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಜಂಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ತಿಳಿಸಿದ್ದಾರೆ.
(ಕ್ಷಣ ಕ್ಷಣದ ಸುದ್ದಿಗಾಗಿ ಸರಕಾರ್ ನ್ಯೂಸ್ ಸಬ್ ಸ್ಕ್ರೈಬ್ ಆಗಿ. ಪಕ್ಕದಲ್ಲಿರುವ ಬೆಲ್ ಬಟನ್ ಪ್ರೆಸ್ ಮಾಡಿ)