ವಿಜಯಪುರ

ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರಿಂದ ಜಿಲ್ಲಾಸ್ಪತ್ರೆ ಹಾಗೂ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳ ಪರಿಶೀಲನೆ

ಸರಕಾರ ನ್ಯೂಸ್‌ ವಿಜಯಪುರ

ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಮಂಗಳವಾರ ಸಂಜೆ ಜಿಲ್ಲಾಸ್ಪತ್ರೆಗೆ ದಿಢೀರ ಭೇಟಿ ನೀಡಿ ಆಸ್ಪತ್ರೆ ವ್ಯವಸ್ಥೆ ಕುರಿತು ಪರಿಶೀಲನೆ ನಡೆಸಿದರು.

ಆಸ್ಪತ್ರೆಯ ಆಭಾ ಸೆಂಟರ್ ವಿಭಾಗ, ಫಾರ್ಮಾಸಿ ವಿಭಾಗ, ಎನ್‍ಆರ್‍ ಸಿ ಮಕ್ಕಳ ವಿಭಾಗ, ತುರ್ತು ವಿಭಾಗ, ಚಿಕ್ಕ ಮಕ್ಕಳ ವಿಭಾಗ, ಚಿಕ್ಕ ಮಕ್ಕಳ ತುರ್ತು ಚಿಕಿತ್ಸಾ ವಿಭಾಗ, ಡಯಾಲಿಸಿಸ್ ವಿಭಾಗ ಹಾಗೂ ಅಡುಗೆ ಕೋಣೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು, ಎಲ್ಲ ಅಗತ್ಯ ಔಷಧಿಗಳನ್ನು ಶೇಖರಣೆ ಮಾಡಿಟ್ಟುಕೊಳ್ಳಬೇಕು. ಅಪೌಷ್ಟಿಕತೆಯಿಂದ ಬಳಲುತ್ತಿರುವ ಮಕ್ಕಳ ಹಿತದೃಷ್ಟಿಯಿಂದ ಅವರ ಆರೋಗ್ಯ ಮತ್ತು ಮನರಂಜನೆಗಾಗಿ ಉದ್ಯಾನವನ ನಿರ್ಮಾಣ ಮಾಡಬೇಕು. ಆಸ್ಪತ್ರೆಯಲ್ಲಿ ದಾಖಲಾಗುವ ಒಳರೋಗಿಗಳಿಗೆ ಗುಣಮಟ್ಟದ ಆಹಾರ ಪೂರೈಸಬೇಕು. ಆಸ್ಪತ್ರೆಯಲ್ಲಿ ಆಧುನಿಕ ಅಡುಗೆ ಕೋಣೆ ನಿರ್ಮಾಣಕ್ಕೆ ಸೂಕ್ತ ಪ್ರಸ್ತಾವನೆ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಈ ಸಂದರ್ಭದಲ್ಲಿ ತುರ್ತು ಚಿಕಿತ್ಸಾ ವಿಭಾಗದಲ್ಲಿ ಉಪಚಾರಕ್ಕಾಗಿ ಬಂದ ರೋಗಿಗಳೊಂದಿಗೆ ಮಾತನಾಡಿ, ಆಸ್ಪತ್ರೆಯಲ್ಲಿ ನೀಡುತ್ತಿರುವ ಚಿಕಿತ್ಸೆ ಕುರಿತು ಮಾಹಿತಿ ಪಡೆದುಕೊಂಡರು. ಅಪೌಷ್ಟಿಕತೆಯಿಂದ ಬಳಲುತ್ತಿರುವ (ಎನ್.ಆರ್.ಸಿ.) ಮಕ್ಕಳ ಹಾಗೂ ತಾಯಂದಿರ ಯೋಗಕ್ಷೇಮದ ಬಗ್ಗೆ ವಿಚಾರಿಸಿ, ಅವರಿಗೆ ಒದಗಿಸುತ್ತಿರುವ ವೈದ್ಯಕೀಯ ಸೇವೆಗಳ ಕುರಿತು ಪ್ರಶಂಸೆ ವ್ಯಕ್ತಪಡಿಸಿದರು.

ಆವರಣದಲ್ಲಿರುವ ಪಿ.ಎಸ್.ಎ. ಪ್ಲಾಂಟ್, ಸಖಿ ಕೇಂದ್ರಕ್ಕೆ ಭೇಟಿ ನೀಡಿ ವ್ಯವಸ್ಥೆಯ ಬಗ್ಗೆ ಮಾಹಿತಿ ಪಡೆದುಕೊಂಡ ಜಿಲ್ಲಾಧಿಕಾರಿಗಳು, ಆರ್.ಟಿ.ಪಿ.ಸಿ.ಆರ್ ಸೆಂಟರ್, ಎಮ್.ಆರ್.ಐ ಸೆಂಟರ್ ಎಮ್.ಸಿ.ಎಚ್ ಆಸ್ಪತ್ರೆಯ ಎಲ್ಲಾ ವಿಭಾಗ ಸೇರಿದಂತೆ ಪೂರ್ಣಗೊಳ್ಳುವ ಹಂತದಲ್ಲಿರುವ ಅಭಿವೃದ್ಧಿ ಕಾಮಗಾರಿಗಳನ್ನು ಪರಿಶೀಲನೆ ಹಾಗೂ ಟ್ರಾಮಾ ಕೇರ್ ಕಟ್ಟಡವನ್ನು ಹಸ್ತಾಂತರಿಸಿದ ಕಡತಗಳ ಕುರಿತು ಪರಿಶೀಲನೆ ನಡೆಸಿದರು.

ಜಿಲ್ಲಾ ಆಸ್ಪತ್ರೆಗೆ ಭೇಟಿ ನಿಡಿದ ಸಂದರ್ಭದಲ್ಲಿ ಜಿಲ್ಲಾ ಶಸ್ತ್ರಚಿಕಿತ್ಸಕರಾದ ಡಾ.ಎಸ್.ಎಲ್.ಲಕ್ಕಣ್ಣವರ ಅವರು ಶ್ರೀ ಸಿದ್ದೇಶ್ವರ ಸ್ವಾಮಿಜಿ ಯವರ ರಚಿಸಿದ ಪುಸ್ತಕವನ್ನು ನೀಡಿ ಜಿಲ್ಲಾಧಿಕಾರಿಗಳಿಗೆ ಬರಮಾಡಿಕೊಂಡರು.

ಈ ಸಂದರ್ಭದಲ್ಲಿ ವೈದ್ಯಾಧಿಕಾರಿಗಳಾದ ಡಾ. ಎ.ಜಿ.ಬಿರಾದಾರ, ಸಹಾಯಕ ಕಾರ್ಯನಿರ್ವಾಹಕ ಅದಿಕಾರಿಗಳಾದ ಕಟ್ಟಿಮನಿ, ಸಹಾಯಕ ಆಡಳಿತಾಧಿಕಾರಿ ಎ.ಎ.ಸಿಂದಗಿಕರ, ಡಾ. ಆನಂದ ಝಳಕಿ, ಡಾ.ಪರಶುರಾಮ ದೇವಮಾನೆ, ಶುಶ್ರೂಷಾಧಿಕಾರಿ ಶ್ರೀಮತಿ ಬಿಸನಾಳ ಹಾಗೂ ಆಸ್ಪತ್ರೆಯ ಇತರೆ ಸಿಬ್ಬಂದಿಗಳು ಉಪಸ್ಥಿತರಿದ್ದರು.

ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಪೂರ್ಣಗೊಳಿಸಲು ಸೂಚನೆ : ಮಂಗಳವಾರ ಸಂಜೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ವಿಜಯಪುರ ನಗರದ ಹೊಸ ಪ್ರವಾಸಿ ಮಂದಿರದ ಹತ್ತಿರದ ಸುಭಾಸಚಂದ್ರ ಭೋಸ್ ವೃತ್ತ, ಆಲ್‍ಅಮೀನ್ ಮೆಡಿಕಲ್ ಕಾಲೇಜ್ ಹಾಗೂ ತೊರವಿ ರಸ್ತೆಯ ಹೆದ್ದಾರಿ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ, ವಿಜಯಪುರ-ಅಥಣಿ-ಮುರಗುಂಡಿ ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯ ಪರಿವೀಕ್ಷಣೆ ನಡೆಸಿ, ಕಾಮಗಾರಿಯನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಬೇಕು. ಯಾವುದೇ ಸಮಸ್ಯೆಗಳಿದ್ದಲ್ಲಿ ನಿವಾರಿಸಿಕೊಂಡು ಕಾಮಗಾರಿ ಪೂರ್ಣಗೊಳಿಸುವಂತೆ ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ರಾಷ್ಟ್ರೀಯ ಹೆದ್ದಾರಿ ವಿಭಾಗದ ಕಾರ್ಯನಿರ್ವಾಹಕ ಅಭಿಯಂತರರಾದ ವಿಜಯ ಪಾಟೀಲ, ಮಹಾನಗರ ಪಾಲಿಕೆ ಆಯುಕ್ತ ಬದ್ರೂದ್ದಿನ ಸೌದಾಗರ, ನಗರಾಭಿವೃದ್ದಿ ಕೋಶದ ಯೋಜನಾ ನಿರ್ದೇಶಕ ವಿಜಯಕುಮಾರ ಮೆಕ್ಕಳಕಿ ಸೇರಿದಂತೆ ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳು ಉಪಸ್ಥಿತರಿದ್ದರು.

(ಕ್ಷಣ ಕ್ಷಣದ ಸುದ್ದಿಗಾಗಿ ಸರಕಾರ ನ್ಯೂಸ್‌ ಸಬ್‌ಸ್ಕ್ರೈಬ್‌ ಆಗಿ. ಅದಕ್ಕಾಗಿ ಪಕ್ಕದಲ್ಲಿರುವ ಬೆಲ್‌ ಬಟನ್‌ ಪ್ರೆಸ್‌ ಮಾಡಿ)

error: Content is protected !!