ಬೈಕ್ – ಬಸ್ ಮಧ್ಯೆ ಡಿಕ್ಕಿ; ಬೈಕ್ ಸವಾರ ಸಾವು ಬಸ್ ಬೆಂಕಿಗೆ ಆಹುತಿ….ಅಬ್ಬಬ್ಬಾ ಏನಿದು ಅನಾಹುತ!!!
ಸರಕಾರ ನ್ಯೂಸ್ ಸಿಂದಗಿ
ಬೈಕ್ ಮತ್ತು ಸರ್ಕಾರಿ ಬಸ್ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಬೈಕ್ ಸವಾರ ಸ್ಥಳದಲ್ಲಿಯೇ ಸಾವಿಗೀಡಾದರೆ ಬಸ್ ಬೆಂಕಿಗೆ ಆಹುತಿಯಾಗಿದೆ.
ಸಿಂದಗಿ ತಾಲೂಕಿನ ಗಬಸಾವಳಗಿ ಬಳಿ ರಾಷ್ಟ್ರೀಯ ಹೆದ್ದಾರಿ-52ರಲ್ಲಿ ಬುಧವಾರ ಈ ಘಟನೆ ನಡೆದಿದೆ. ಸಿಂದಗಿಯಿಂದ ಮೋರಟಗಿಗೆ ಹೊರಟಿದ್ದ ಬೈಕ್ ಸವಾರನಿಗೆ ಎದುರಿನಿಂದ ಬಂದ ಬಸ್ ಡಿಕ್ಕಿ ಹೊಡೆದಿದೆ.
ಈ ವೇಳೆ ಬಸ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಪ್ರಯಾಣಿಕರು ಕೆಳಗೆ ಇಳಿದಿದ್ದಾರೆ. ಏಕಾಏಕಿ ಕೆನ್ನಾಲಿಗೆ ಚಾಚಿದೆ. ಕೆಲವೇ ಕ್ಷಣಗಳಲ್ಲಿ ಬೆಂಕಿ ಇಡೀ ಬಸ್‌ನ್ನೇ ಆವರಿಸಿಕೊಂಡಿದ್ದು, ಧಗಧಗಿಸಿ ಉರಿದಿದೆ. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವಷ್ಟರ ಹೊತ್ತಿಗೆ ಇಡೀ ಬಸ್ ಸುಟ್ಟು ಕರಕಲಾಗಿತ್ತು.
ಘಟನೆಯಿಂದಾಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಸಂಚಾರ ಸ್ಥಗಿತಗೊಂಡಿತ್ತು. ಬೆಂಕಿ ನಂದಿಸುವ ಕಾರ್ಯಾಚರಣೆ ಬಳಿಕ ಸಂಚಾರಕ್ಕೆ ಅನುವು ಮಾಡಿಕೊಡಲಾಯಿತು. ಸಿಂದಗಿ ಪೊಲೀಸರು ಭೇಟಿ ನೀಡಿ ಬೈಕ್ ಸವಾರನ ಮಾಹಿತಿ ಕಲೆ ಹಾಕುತ್ತಿದ್ದಾರೆ.
(ಕ್ಷಣ ಕ್ಷಣದ ಸುದ್ದಿಗಾಗಿ ಸರಕಾರ ನ್ಯೂಸ್ ಸಬ್ ಸ್ಕ್ರೈಬ್ ಆಗಿ. ಅದಕ್ಕಾಗಿ ಪಕ್ಕದಲ್ಲಿರುವ ಬೆಲ್ ಬಟನ್ ಪ್ರೆಸ್ ಮಾಡಿ)