ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ವ್ಯಾಪಕ ನಕಲು, ಜಿಲ್ಲಾಡಳಿತಕ್ಕೆ ಶೋಭೆ ತರುವಂಥದ್ದಲ್ಲ ! ಅಧಿಕಾರಿ ವರ್ಗಕ್ಕೆ ಚಾಟಿ ಬೀಸಿದ ಸಿಂಗ್
ಸರಕಾರ ನ್ಯೂಸ್ ವಿಜಯಪುರ
ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ವ್ಯಾಪಕವಾಗಿ ನಕಲು ಕಂಡು ಬರುತ್ತಿರುವ ಹಿನ್ನೆಲೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಪ್ರಧಾನ ಕಾರ್ಯದರ್ಶಿ ರಿತೇಶ್ ಕುಮಾರ್ ಸಿಂಗ್ ಜಿಲ್ಲೆಯ ಹಿರಿಯ ಅಧಿಕಾರಿಗಳಿಗೆ ಚಾಟಿ ಬೀಸಿದ್ದಾರೆ.
ರಾಜ್ಯದಲ್ಲಿ 2023-24ನೇ ಶೈಕ್ಷಣಿಕ ವರ್ಷದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯು ನಡೆಸುತ್ತಿರುವುದು ಸರಿಯಷ್ಟೇ, ಈ ಪರೀಕ್ಷೆಯನ್ನು ಸಮರ್ಪಕವಾಗಿ, ಗುಣಾತ್ಮಕವಾಗಿ ನಡೆಸಲು ಇಲಾಖೆಯು ಎಲ್ಲ ರೀತಿಯ ಮುಂಜಾಗೃತ ಕ್ರಮಗಳನ್ನು ತೆಗೆದುಕೊಂಡು ಈ ಬಗ್ಗೆ ಜಿಲ್ಲಾಡಳಿತ ನಿರ್ವಹಿಸಬೇಕಾದ ಜವಾಬ್ದಾರಿಗಳ ಬಗ್ಗೆ ಹಲವು ಸಭೆಗಳನ್ನು ನಡೆಸಿ ಸಾಕಷ್ಟು ಮಾರ್ಗದರ್ಶನ ನೀಡಲಾಗಿದೆ. ಆದರೂ, ಪರೀಕ್ಷಾ ಕಾರ್ಯ ಸಮರ್ಪಕವಾಗಿ ನಡೆಯದಿರುವುದು ಕಂಡ ಬಂದಿದೆ ಎಂದು ತಿಳಿಸಿದ್ದಾರೆ.
ಜಿಲ್ಲೆಯ ಹೊರ್ತಿ ರೇವಣಸಿದ್ಧೇಶ್ವರ ಪಪೂ ಕಾಲೇಜಿನ ಬ್ಲಾಕ್, ಚಡಚಣ ಮತ್ತು ಕಾರಜೋಳದ ಕಿತ್ತೂರ ರಾಣಿ ಚನ್ನಮ್ಮ ವಸತಿ ಶಾಲೆ ಪರೀಕ್ಷಾ ಕೇಂದ್ರಗಳಲ್ಲಿ ನಕಲು ಮಾಡಿರುವುದು ತಪಾಸಣೆ ವೇಳೆ ಕಂಡು ಬಂದಿದೆ. ಈ ವಿಷಯವಾಗಿ ಈಗಾಗಲೇ ಸಂಬಂಧಿಸಿದ ಉಪ ನಿರ್ದೇಶಕರು ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳ ಮೇಲೆ ಶಿಸ್ತು ಕ್ರಮ ಜರುಗಿಸಲು ಕ್ರಮ ವಹಿಸಲಾಗಿದೆ.
ಇಡೀ ರಾಜ್ಯದಲ್ಲಿ ಸುಸೂತ್ರವಾಗಿ ಪರೀಕ್ಷೆ ನಡೆಯುತ್ತಿದ್ದು, ವಿಜಯಪುರ ಜಿಲ್ಲೆಯಲ್ಲಿ ಮಾತ್ರ ಪರೀಕ್ಷಾ ಕಾರ್ಯ ಸಮರ್ಪಕವಾಗಿ ನಡೆಸದೇ ಇರುವ ಪ್ರಕರಣಗಳು ವರದಿಯಾಗುತ್ತಿರುವುದು ಜಿಲ್ಲಾಡಳಿತಕ್ಕೆ ಶೋಭೆ ತರುವಂಥದ್ದಲ್ಲ, ಇದು ಅಸಮರ್ಥತೆಯನ್ನು ತೋರಿಸುತ್ತದೆ ಎಂದು ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.
ವಿದ್ಯಾರ್ಥಿಗಳ ಭವಿಷ್ಯದ ದೃಷ್ಠಿಯಿಂದ ನಡೆಸುವ ನಿರ್ಣಾಯಕ ಪರೀಕ್ಷೆಯ ಸಂದರ್ಭದಲ್ಲಿ ಇಂಥ ಬೇಜವಾಬ್ದಾರಿ ಕಾರ್ಯನಿರ್ವಹಣೆಯನ್ನು ಇಲಾಖೆಯು ಸಮರ್ಥಿಸುವುದಿಲ್ಲ ಎಂಬ ಸ್ಪಷ್ಟ ಸೂಚನೆ ನೀಡಿದ್ದಾರೆ.
ಅಮಾನತ್ತು-ಕಾರಣ ಕೇಳಿ ನೋಟಿಸ್:
ನಕಲು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಮತ್ತು ಪ್ರಧಾನ ಕಾರ್ಯದರ್ಶಿಗಳ ಪತ್ರದಿಂದ ಎಚ್ಚೆತ್ತುಕೊಂಡುರುವ ಅಧಿಕಾರಿ ವರ್ಗ ಕ್ರಮಕ್ಕೆ ಮುಂದಾಗಿದೆ.
ನಗರದ ಅಫಜಲಪುರ ಟಕ್ಕೆಯ ಸರ್ಕಾರಿ ಮುಸ್ಲಿಂ ವಸತಿ ಶಾಲೆಯ ಪರೀಕ್ಷಾ ಕೇಂದ್ರದಲ್ಲಿ ನಿಯಮ ಉಲ್ಲಂಘನೆ ಹಿನ್ನೆಲೆ ಮೇಲ್ವಿಚಾರಕ ಅಲ್ಲಾಭಕ್ಷ ಶಹಾಪುರ ಇವರನ್ನು ಅಮಾನತ್ತುಗೊಳಿಸಲಾಗಿದೆ. ಅಲ್ಲದೇ, ಪರೀಕ್ಷಾ ಕೇಂದ್ರಗಳಲ್ಲಿ ಪೂರ್ಣ ಪ್ರಮಾಣದಲ್ಲಿ ಸಿಸಿ ಕ್ಯಾಮೆರಾ ಅಳವಡಿಸದೇ ಇರುವ ಬಗ್ಗೆ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೂ ಕಾರಣ ಕೇಳಿ ನೋಟಿಸ್ ನೀಡಲಾಗಿದೆ.
(ಕ್ಷಣಕ್ಷಣದ ಮಹತ್ವದ ಸುದ್ದಿಗಾಗಿ ಸರಕಾರ ನ್ಯೂಸ್ ಸಬ್ ಸ್ಕ್ರೈಬ್ ಆಗಿ. ಅದಕ್ಕಾಗಿ ಪಕ್ಕದಲ್ಲಿರುವ ಬೆಲ್ ಬಟನ್ ಪ್ರೆಸ್ ಮಾಡಿ)