Uncategorized

ವಾಲ್ಮೀಕಿ ಜಯಂತಿಯಂದು ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ, ಏನದು ಗೊತ್ತಾ?

ಬೆಂಗಳೂರು: ಎಲ್ಲಾ ಎಸ್‌ಟಿ ವಸತಿ ಶಾಲೆಗಳಿಗೆ ಮತ್ತು ರಾಯಚೂರು ವಿವಿಗೆ ಮಹರ್ಷಿ ವಾಲ್ಮೀಕಿ ಹೆಸರು ಇಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮಹತ್ವದ ಘೋಷಣೆ ಮಾಡಿದರು.

ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಶ್ರೀ ವಾಲ್ಮೀಕಿ ಜಯಂತಿ ಪ್ರಯುಕ್ತ ಬ್ಯಾಂಕ್ವೆಟ್ ಹಾಲ್‌ನಲ್ಲಿ ಆಯೋಜಿಸಿದ್ದ ಕಾರ್ಯಕ್ರಮವನ್ನು ಉದ್ಘಾಟಿಸಿ, ಐದು ಮಹನೀಯರಿಗೆ ವಾಲ್ಮೀಕಿ ಪ್ರಶಸ್ತಿ ವಿತರಿಸಿ ಮಾತನಾಡಿದರು.
ಶಾಕುಂತಲಾ ನಾಟಕ ಬರೆದ ಕಾಳಿದಾಸ ಕುರುಬ ಸಮುದಾಯದವರು. ಮಹಾಭಾರತ ಬರೆದ ವ್ಯಾಸರು ಬೆಸ್ತ ಸಮುದಾಯದವರು. ರಾಮಾಯಣ ಬರೆದ ಮಹರ್ಷಿ ವಾಲ್ಮೀಕಿ ಸಮುದಾಯದವರು. ದರೋಡೆ ಮಾಡ್ಕೊಂಡು ಓಡಾಡುತ್ತಿದ್ದ ವಾಲ್ಮೀಕಿ ರಾಮಾಯಣ ಬರೆಯಲು ಸಾಧ್ಯವಾ ಎಂದು ಕತೆ ಕಟ್ಟಿಬಿಟ್ಟರು. ತಳ ಸಮುದಾಯಗಳು, ಶೂದ್ರರು ಶಿಕ್ಷಣ, ಸಂಸ್ಕೃತ ಕಲಿಯುವುದು ನಿಷಿದ್ಧವಾಗಿತ್ತು. ಇಂಥಾ ಹೊತ್ತಲ್ಲೇ ಸಂಸ್ಕೃತ ಕಲಿತು ಶ್ಲೋಕಗಳ ಮೂಲಕ ಜಗತ್ಪ್ರಸಿದ್ದ ರಾಮಾಯಣ ಮಹಾಕಾವ್ಯ ಬರೆದರಲ್ಲಾ ಇದು ಹೆಮ್ಮೆಯ ಮತ್ತು ಮಾದರಿ ಸಂಗತಿ ಎಂದರು.
ಶಿಕ್ಷಣ ಕಲಿಯುವ ಅವಕಾಶ ಸಿಕ್ಕಾಗ ಇವರೆಲ್ಲಾ ಕಲಿತರು. ಬರೆದರು. ಜಗತ್ತಿಗೇ ಪ್ರೇರಣೆ ಆದರು. ವಾಲ್ಮೀಕಿ ಅವರು ಸಮಪಾಲು, ಸಮಬಾಳು, ಸಮಾನ ಅವಕಾಶಗಳ ಬಗ್ಗೆ ಹೇಳಿದ್ದರು. ರಾಮಾಯಣದ ರಾಮರಾಜ್ಯ ಅಂದರೆ ಸಮಪಾಲಿನ ಸಮಾನ ಅವಕಾಶಗಳ ರಾಜ್ಯ ಎಂದರ್ಥ ಎಂದರು.
ರಾಮನ ಮಕ್ಕಳಾದ ಲವ ಕುಶರಿಗೆ ಆಶ್ರಯ ನೀಡಿ ಶಿಕ್ಷಣ ಕೊಟ್ಟಿದ್ದು ವಾಲ್ಮೀಕಿ ಮಹರ್ಷಿಗಳು. ವಾಲ್ಮೀಕಿ ವಿಶ್ವಮಾನವರಾಗಿದ್ದರು ಎನ್ನುವುದಕ್ಕೆ ಇದು ಸಣ್ಣ ಉದಾಹರಣೆ ಎಂದರು.
ಎಸ್‌ಸಿ ಎಸ್‌ಪಿ, ಟಿಎಸ್‌ಪಿ ಮೂಲಕ ಎಸ್‌ಸಿ-ಎಸ್‌ಟಿ ಸಮುದಾಯದ ಜನಸಂಖ್ಯೆಗೆ ಅನುಗುಣವಾಗಿ ಹಣವನ್ನು ಆಯವ್ಯಯದಲ್ಲಿ ಮೊದಲಿಗೆ ಮೀಸಲಿಟ್ಟಿದ್ದು ನಮ್ಮ ಸರ್ಕಾರ. ತಳ ಸಮುದಾಯಗಳಿಗೆ ವಸತಿ ಶಾಲೆಗಳನ್ನು ಮೊದಲು ಆರಂಭಿಸಿದ್ದು ನಾನು. ಪ್ರತೀ ಹೋಬಳಿಗೂ ಒಂದು ವಸತಿ ಶಾಲೆ ಮಾಡಿಯೇ ಮಾಡ್ತೀನಿ ಎಂದು ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ಪುನರುಚ್ಚರಿಸಿದರು.
ಕೇಂದ್ರದಲ್ಲಿರುವ ಬಿಜೆಪಿ ಸರ್ಕಾರವಾಗಲೀ, ಬಿಜೆಪಿ ಅಧಿಕಾರದಲ್ಲಿರುವ ಒಂದೇ ಒಂದು ರಾಜ್ಯದಲ್ಲಾಗಲೀ ಎಸ್‌ಸಿಎಸ್‌ಪಿ, ಟಿಎಸ್‌ಪಿ ಕಾಯ್ದೆಯನ್ನು ಜಾರಿಗೆ ತಂದಿಲ್ಲ ಏಕೆ ಎಂದು ಸಿಎಂ ಪ್ರಶ್ನಿಸಿದರು.
ಬರೀ ಬಾಯಿ ಮಾತಲ್ಲಿ ಸಮಾನತೆ ಬರಲ್ಲ. ಆರ್ಥಿಕ ಕಾರ್ಯಕ್ರಮಗಳನ್ನು ಜಾರಿಗೆ ತರಬೇಕು ಎಂದು ಬಿಜೆಪಿ ಬಂಡವಾಳವನ್ನು ಬಿಚ್ಚಿಟ್ಟರು. ಆರ್ಥಿಕ ಮತ್ತು ಸಾಮಾಜಿಕ ಅಸಮಾನತೆ ಹೋಗದ ಹೊರತು ಸಮಾನತೆ ಬರುವುದಿಲ್ಲ ಎನ್ನುವ ಎಚ್ಚರಿಕೆಯನ್ನು ಬಾಬಾ ಸಾಹೇಬ್ ಅಂಬೇಡ್ಕರ್ ನೀಡಿದ್ದಾರೆ.
ನಮ್ಮ ಸರ್ಕಾರ ಎಲ್ಲಾ ಧರ್ಮ, ಎಲ್ಲಾ ಜಾತಿಯ ಬಡವರಿಗೆ ಆರ್ಥಿಕ ಶಕ್ತಿ ಕೊಡಲು ಗ್ಯಾರಂಟಿಗಳನ್ನು ಜಾರಿಗೆ ತಂದರೆ ಇದನ್ನು ವಿರೋಧಿಸಿದವರು ಬಿಜೆಪಿಯವರು. ಆದ್ದರಿಂದ ಗ್ಯಾರಂಟಿಗಳ ಫಲಾನುಭವಿಗಳು ಬಿಜೆಪಿಯವರಿಗೆ ಸರಿಯಾಗಿ ಪಾಠ ಹೇಳಿ. ಬಿಜೆಪಿಯವರ ಸುಳ್ಳುಗಳಿಗೆ ತಲೆ ಕೊಟ್ಟು ಮೋಸ ಹೋಗದೆ ಬಿಜೆಪಿ ಸುಳ್ಳುಗಳಿಗೆ ಸರಿಯಾದ ಉತ್ತರ ಕೊಡಿ. ಬಡ್ತಿಯಲ್ಲಿ ಮೀಸಲಾತಿಯನ್ನು ಸುಪ್ರೀಂಕೋರ್ಟ್ ಎತ್ತಿ ಹಿಡಿಯಿತು. ಅದನ್ನು ಮೊದಲಿಗೆ ಜಾರಿಗೆ ತಂದಿದ್ದು ನಮ್ಮ ಸರ್ಕಾರ. ಗುತ್ತಿಗೆಯಲ್ಲಿ ಮೀಸಲಾತಿ ಮೊದಲಿಗೆ ತಂದಿದ್ದು ನಮ್ಮ ಸರ್ಕಾರ. ಇದನ್ನು ನಾಡಿನ ಜನತೆ ಅರ್ಥಮಾಡಿಕೊಳ್ಳಬೇಕು ಎಂದರು.
ನಾನು ಹೇಳಿದ್ದೀನಿ ಎನ್ನುವ ಕಾರಣಕ್ಕೆ ನೀವು ಇದನ್ನೆಲ್ಲಾ ನಂಬಬೇಡಿ. ಸತ್ಯ, ಸುಳ್ಳನ್ನು ಪರಾಮರ್ಷಿಸಿ, ವಿವೇಚಿಸಿ. ಸತ್ಯವನ್ನು ಧೈರ್ಯವಾಗಿ-ಬಹಿರಂಗವಾಗಿ ಮಾತಾಡುವ ಧೈರ್ಯವನ್ನು ದಲಿತ, ಹಿಂದುಳಿದ, ಅಲ್ಪಸಂಖ್ಯಾತ ಸಮುದಾಯಗಳು ಬೆಳೆಸಿಕೊಳ್ಳಬೇಕು. ಇದೇ ಮಹರ್ಷಿ ವಾಲ್ಮೀಕಿ ಅವರಿಗೆ ನಾವು-ನೀವು ಸಲ್ಲಿಸುವ ಗೌರವ ಎಂದರು.
ರಾಜನಹಳ್ಳಿ ವಾಲ್ಮೀಕಿ ಸಮುದಾಯದ ಮಠದ ಜಗದ್ಗುರು ಪ್ರಸನ್ನಾ ನಂದಪುರಿ ಶ್ರೀಗಳ ದಿವ್ಯ ಸಾನ್ನಿಧ್ಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಚಿವರಾದ ಸತೀಶ ಜಾರಕಿಹೊಳಿ, ಕೆ.ಎನ್.ರಾಜಣ್ಣ, ಎಚ್.ಕೆ.ಪಾಟೀಲ, ಮಾಜಿ ಸಂಸದರಾದ ವಿ.ಎಸ್.ಉಗ್ರಪ್ಪ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಬಸವನಗೌಡ ದದ್ದಲ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಅಜಯ್ ಸಿಂಗ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಹಾಗೂ ವಿಧಾನಸಭೆ ಮತ್ತು ವಿಧಾನಪರಿಷತ್ ಸದಸ್ಯರುಗಳು ಸೇರಿ ಸಮುದಾಯದ ಮುಖಂಡರು ಉಪಸ್ಥಿತರಿದ್ದರು.

error: Content is protected !!